Breaking News
ತುಂಗಭದ್ರಾ ಜಲಾಶಯದ ನೀರಿನ ಬಣ್ಣ ಬದಲಾವಣೆ, ಬರಗಾಲದ ಬಗ್ಗೆ ಯುವ ಸಂಸತ್ತಿನಲ್ಲಿ ಚರ್ಚೆ

 

 

 

 

ಗಂಗಾವತಿ: ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ನಗರದ ಐಎಂಎ ಭವನದಲ್ಲಿ ಆಯೋಜಿಸಿದ್ದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ತುಂಗಭದ್ರಾ ಜಲಾಶಯದ ನೀರು ಹಸಿರು ಬಣ್ಣಕ್ಕೆ ತಿರುಗಿರುವುದು, ಎಲ್‌ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗುವ ಆತಂಕ, ಕುಡಿಯುವ ನೀರಿನ ಅಭಾವ ಹಾಗೂ ಬರಗಾಲದಿಂದ ಜನರು ಗುಳೆ ಹೋಗುತ್ತಿರುವ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಚರ್ಚೆ ನಡೆಸಿದರು.

ಎಸ್.ಕೆ.ಎನ್.ಜಿ. ಕಾಲೇಜಿನ ವಿದ್ಯಾರ್ಥಿ ಶಿವಶರಣ ಅವರು ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಮುಖ್ಯಮಂತ್ರಿಯಾಗಿ, ರೇಣುಕಾ ಉಪಮುಖ್ಯಮಂತ್ರಿಯಾಗಿ, ಎಂ.ಡಿ. ಗೌಸ್ ವಿರೋಧ ಪಕ್ಷದ ನಾಯಕರಾಗಿ ಹಾಗೂ ಇಮಾಂಬೀ ವಿರೋಧ ಪಕ್ಷದ ಉಪನಾಯಕರಾಗಿ ಭಾಗವಹಿಸಿ ವಿವಿಧ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ತುಂಗಭದ್ರಾ ಜಲಾಶಯದ ನೀರು ಹಸಿರು ಬಣ್ಣಕ್ಕೆ, ಪಾಚಿಯ ಬಣ್ಣಕ್ಕೆ ತಿರುಗುತ್ತಿರುವ ವಿಚಾರ ಅಧಿವೇಶನದಲ್ಲಿ ಪ್ರಮುಖವಾಗಿ ಚರ್ಚೆಗೆ ಬಂದಿತು. ಜಲಾಶಯದ ನೀರಿನ ಗುಣಮಟ್ಟ, ಅದರ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಸುರಕ್ಷತೆಯ ಕುರಿತು ವಿದ್ಯಾರ್ಥಿಗಳು ಗಮನ ಸೆಳೆದರು.

ಎಲ್‌ನಿನೋ ಪರಿಣಾಮದಿಂದ ಮಳೆಯ ಪ್ರಮಾಣದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಮತ್ತು ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆಯಿಂದ ಜಲಾಶಯಕ್ಕೆ ಒಳಹರಿವು ಕಡಿಮೆಯಾಗುವ ಆತಂಕದ ಬಗ್ಗೆಯೂ ಚರ್ಚಿಸಲಾಯಿತು. ಮಳೆ ಕೊರತೆ ಮುಂದುವರಿದರೆ ರಾಯಚೂರು, ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆ ಕುರಿತು ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದರು.

ಇದೇ ವೇಳೆ ತೀವ್ರ ಬರಗಾಲದಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗುವುದು, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗುವುದು ಹಾಗೂ ಜೀವನೋಪಾಯಕ್ಕಾಗಿ ಜನರು ತಮ್ಮ ಊರುಗಳನ್ನು ತೊರೆದು ಬೇರೆಡೆಗೆ ಗುಳೆ ಹೋಗುತ್ತಿರುವ ಸಮಸ್ಯೆಯ ಬಗ್ಗೆಯೂ ಚರ್ಚೆ ನಡೆಯಿತು. ಬರಗಾಲದ ಸಂದರ್ಭದಲ್ಲಿ ಕುಡಿಯುವ ನೀರಿನ ಪೂರೈಕೆ, ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ಒದಗಿಸುವ ಅಗತ್ಯವನ್ನು ಪ್ರಸ್ತಾಪಿಸಲಾಯಿತು.

ಯುವ ಸಂಸತ್ತು ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಸಂಸದೀಯ ಕಾರ್ಯವೈಖರಿಯನ್ನು ಪ್ರಾಯೋಗಿಕವಾಗಿ ಅರಿತುಕೊಂಡರು. ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರ ನಿರ್ವಹಿಸುವ ಮೂಲಕ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸುವುದು, ಅಭಿಪ್ರಾಯಗಳನ್ನು ಮಂಡಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳುವ ಅವಕಾಶ ಪಡೆದರು.

Leave a Reply

Your email address will not be published. Required fields are marked *

error: Content is protected !!