ಗಂಗಾವತಿ: ಆಧ್ಯಾತ್ಮ ಶಕ್ತಿಯನ್ನು ನಂಬಿದ ವ್ಯಕ್ತಿಗಳು ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು. ದೇವರು ಮತ್ತು ಧರ್ಮದ ಮೇಲೆ ನಂಬಿಕೆ ಇಟ್ಟು, ಉತ್ತಮ ಮಾರ್ಗದಲ್ಲಿ ನಡೆಯುವ ಮೂಲಕ ಇತರರಿಗೆ ಮಾರ್ಗದರ್ಶಕರಾಗಬೇಕು ಎಂದು ಮಾಜಿ ಸಚಿವ ಹಾಗೂ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.
ನಗರದ ಇಸ್ಲಾಂಪುರದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕಳೆದ 60 ವರ್ಷಗಳಿಂದ ಇಸ್ಲಾಂಪುರದಲ್ಲಿ ಹಿರಿಯರು ನಿರ್ಮಿಸಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವು ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಟುವಟಿಕೆಗಳ ಮೂಲಕ ಜನರಲ್ಲಿ ದೇವರ ಮೇಲಿನ ಭಕ್ತಿ, ಆಧ್ಯಾತ್ಮದ ಮಹತ್ವ ಮತ್ತು ಮಾನವೀಯ ಮೌಲ್ಯಗಳ ಕುರಿತು ಅರಿವು ಮೂಡಿಸುತ್ತಿದೆ. ಪ್ರತಿನಿತ್ಯ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಅಮಾವಾಸ್ಯೆ, ಹುಣ್ಣಿಮೆ ಹಾಗೂ ದಸರಾ ಸಂದರ್ಭದಲ್ಲಿ ವಿಶೇಷ ಪೂಜೆ, ಪುರಾಣ ಪ್ರವಚನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ದೇವಸ್ಥಾನದಲ್ಲಿ ವಿಶೇಷ ಪವಾಡ ಶಕ್ತಿ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ. ಶ್ರೀ ಗಂಗಮ್ಮ ತಾಯಿಯವರ ನೇತೃತ್ವದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು, ದೇವಸ್ಥಾನವು ಅಭಿವೃದ್ಧಿಯತ್ತ ಸಾಗುತ್ತಿದೆ. ಜನಪ್ರತಿನಿಧಿಗಳು ಹಾಗೂ ವರ್ತಕರು ಕೂಡ ದೇವಸ್ಥಾನದ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಎಂ. ಮಲ್ಲಿಕಾರ್ಜುನ ನಾಗಪ್ಪ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಗಂಗಮ್ಮ ತಾಯಿಯವರು, ಅಶೋಕ ಗೌಡ, ವೀರೇಶ ಮೈಲಿ, ಬಸವರಾಜ ಕುರುಗೋಡು, ಚನ್ನಪ್ಪ ಕುರುಗೋಡು, ನಾಗರಾಜ ಮೇದಾರ್, ಮಲ್ಲಪ್ಪ, ಅಶೋಕ ಶ್ಯಾವಿ, ವೆಂಕಟೇಶ ಕುಡುತಿನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.